ಉಚಿತ ಪಡಿತರ: ಕೇಂದ್ರ ಸರ್ಕಾರ ಘೋಷಣೆ

Share




ನವದೆಹಲಿ: ‘ಕೋವಿಡ್‌ ಎರಡನೇ ಅಲೆಯಲ್ಲಿ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬಡವರಿಗೆ ಮುಂದಿನ ಎರಡು ತಿಂಗಳುಗಳ ಕಾಲ (ಮೇ, ಜೂನ್‌) ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ’ ಅಡಿ ಉಚಿತ ಆಹಾರ ಧಾನ್ಯ ವಿತರಿಸುವುದನ್ನು ಪುನರಾರಂಭಿಸಲಾಗುವುದು’ ಎಂದು ಕೇಂದ್ರ ಸರ್ಕಾರವು ಶುಕ್ರವಾರ ಹೇಳಿದೆ.

‘ಒಟ್ಟು 80 ಕೋಟಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ.ಉಚಿತ ಆಹಾರ ಧಾನ್ಯ ವಿತರಿಸಲಾಗುವುದು. ಈ ಬಾರಿ ಯೋಜನೆಯಡಿ ದ್ವಿದಳ ಧಾನ್ಯಗಳನ್ನು ವಿತರಿಸುವುದಿಲ್ಲ’ ಎಂದು ಕೇಂದ್ರ ಆಹಾರ ಮತ್ತು ಸಾರ್ವಜನಿಕ ಪಡಿತರ ವಿತರಣಾ ಸಚಿವಾಲಯದ ಕಾರ್ಯದರ್ಶಿ ಸುಧಾಂಶು ಪಾಂಡೆ ತಿಳಿಸಿದ್ದಾರೆ.

‘ಈ ಹಿಂದೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್ಎಫ್ಎಸ್ಎ) ಅಡಿಯಲ್ಲಿ ನೋಂದಾಯಿತ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ ತಿಂಗಳಿಗೆ 5 ಕೆಜಿ ಗೋಧಿ, ಅಕ್ಕಿಯ ಜೊತೆಗೆ 1 ಕೆಜಿ ದ್ವಿದಳ ವಿತರಿಸಲಾಗುತ್ತಿತ್ತು. ಆದರೆ, ಈ ಬಾರಿ ದ್ವಿದಳ ಧಾನ್ಯ ವಿತರಿಸಲಾಗುವುದಿಲ್ಲ’ ಎಂದು ಅವರು ಹೇಳಿದ್ದಾರೆ.