ಸಂಕ್ಷಿಪ್ತ ಪರಿಷ್ಕರಣೆ ಮತದಾರರ ಕರಡು ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಬಹುದು

Share

ಹಾವೇರಿ: ಜಿಲ್ಲೆಯಾದ್ಯಂತ ಎಲ್ಲ ಮತಗಟ್ಟೆಗಳಲ್ಲಿ, ಗ್ರಾಮ ಪಂಚಾಯತಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ, ತಹಶೀಲ್ದಾರರ, ಉಪ ವಿಭಾಗಾಧಿಕಾರಿಗಳ ಮತ್ತು ಜಿಲ್ಲಾಧಿಕಾರಿಗಳ ಕಛೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ವಿಧಾನಸಭಾ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಪಟ್ಟಿಯನ್ನು ಡಿಸೆಂಬರ್ 16 ರಂದು ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.

ಅರ್ಹತಾ ದಿನಾಂಕ 01-01-2020ಕ್ಕೆ ಸಂಬಂಧಿಸಿದಂತೆ ಸದರಿ ಕರಡು ಮತದಾರರ ಪಟ್ಟಿಗಳಲ್ಲಿ ಸಾರ್ವಜನಿಕರು ತಮ್ಮ ಹೆಸರು ಪ್ರಕಟವಾದ ಬಗ್ಗೆ ಪರಿಶೀಲಿಸಿಕೊಳ್ಳಬೇಕು. ಒಂದು ವೇಳೆ ಅರ್ಹತಾ ದಿನಾಂಕಕ್ಕೆ ಸಂಬಂಧಿಸಿದಂತೆ ಯುವಕರು/ಯುವತಿಯರು ಅಥವಾ ಸಾರ್ವಜನಿಕರು ಹೊಸದಾಗಿ ಹೆಸರು ಸೇರ್ಪಡೆಗಾಗಿ ನಮೂನೆ-6ರಲ್ಲಿ, ಹೆಸರು ಕಡಿಮೆಗೊಳಿಸಲು ನಮೂನೆ-7ರಲ್ಲಿ, ಹೆಸರು ಇತ್ಯಾದಿ ತಿದ್ದುಪಡಿ ಬಯಸಿದ್ದಲ್ಲಿ ನಮೂನೆ-8ರಲ್ಲಿ ಮತ್ತು ಹೆಸರು ವರ್ಗಾವಣೆ ಮಾಡಬೇಕಾದ್ದಲ್ಲಿ ನಮೂನೆ-8ಎ ರಲ್ಲಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಂಬಂಧ ಪಟ್ಟ ಮತಗಟ್ಟೆ ಅಧಿಕಾರಿ (ಬಿಎಲ್‍ಓ) ರವರಿಗೆ ಚುನಾವಣಾ ವೇಳಾಪಟ್ಟಿಯಂತೆ ದಿನಾಂಕ 16-12-2019 ರಿಂದ 15-01-2020ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.

ಸದರಿ ಅವಧಿಯಲ್ಲಿ ಸ್ವೀಕರಿಸಿದ ಹಕ್ಕು ಮತ್ತು ಆಕ್ಷೇಪಣೆಯ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ದಿನಾಂಕ:27-01-2020ರಂದು ಕಾಲೋಚಿತಗೊಳಿಸಲಾಗುವುದು. ನಂತರ ಪುರವಣಿ ಪಟ್ಟಿಯನ್ನು ದಿನಾಂಕ 04-02-2020ರಂದು ತಯಾರಿಸಿ ಅಂತಿಮ ಮತದಾರರ ಪಟ್ಟಿಯನ್ನು ದಿನಾಂಕ 07-02-2020ರಂದು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.