ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ ಯೋಜನೆ ಲಾಭ ಎಲ್ಲರಿಗೂ ತಲುಪಲಿ: ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ

Share

ಹಾವೇರಿ: ಆಯುಷ್ಮಾನ ಭಾರತ, ಆರೋಗ್ಯ ಕರ್ನಾಟಕ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಎಲ್ಲರೂ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳ ಕಚೇರಿ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಲಾದ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಪಾಕ್ಷಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಈಗಾಗಲೇ 8722 ಕಾರ್ಡ್ ವಿತರಣೆ ಮಾಡಲಾಗಿದೆ. ಬಿ.ಪಿ.ಎಲ್. ಕಾರ್ಡ್‍ದಾರರಿಗೆ ಐದು ಲಕ್ಷ ರೂ.ವರೆಗೆ ವೈದ್ಯಕೀಯ ಉಚಿತ ಚಿಕಿತ್ಸೆ ನೀಡಲಾಗುವುದು. ಅದರಂತೆ ಎ.ಪಿ.ಎಲ್. ಕಾರ್ಡ್‍ದಾರರಿಗೆ ಶೇ.30 ರಷ್ಟು ರಿಯಾಯಿತಿ ದರದಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.

ಆರೋಗ್ಯ ಟ್ರಸ್ಟ್‍ನ ವಿಭಾಗೀಯ ಸಮಾಲೋಚಕ ಡಾ.ಬಿ.ಡಿ.ಗಾಂಗೆ ಅವರು ಮಾತನಾಡಿ, ಆಯುಷ್ಮಾನ ಭಾರತ ಯೋಜನೆಯಡಿ 1650 ಚಿಕಿತ್ಸಾ ವಿಧಾನ ಒಳಗೊಂಡಿದ್ದು, ಪ್ರಾಥಮಿಕ ಚಿಕಿತ್ಸೆಗಳು ಮತ್ತು ಸರಳ ದ್ವಿತೀಯ ಹಂತದ 291 ಚಿಕಿತ್ಸೆಗಳನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಮಾತ್ರ ನೀಡಲಾಗುತ್ತದೆ. ಕ್ಲಷ್ಟಕರ ದ್ವಿತೀಯ ಹಂತದ 254 ಚಿಕಿತ್ಸಾ ವಿಧಾನಗಳನ್ನು ತೃತೀಯ ಹಂತದ 900 ಚಿಕಿತ್ಸಾ ವಿಧಾನಗಳು ಹಾಗೂ 169 ತುರ್ತು ಚಿಕಿತ್ಸೆಗಳನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ಮತ್ತು ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಒದಗಿಸಲಾಗುತ್ತದೆ. 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ತಾವು ಇಚ್ಛಿಸುವ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಡಮನಿ, ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ, ಸುವರ್ಣ ಆರೋಗ್ಯ ಟ್ರಸ್ಟ್ ಜಿಲ್ಲಾ ಸಂಯೋಜಕ ಮಹಾದೇವ ನಿಲಂಗಿ ಇತರರು ಇದ್ದರು.