ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪದ ಗ್ರಹಣ

Share

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಸಂಜೆ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಶುಕ್ರವಾರ ಸಂಜೆ 6.30ಕ್ಕೆ ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಬಿ.ಎಸ್ ಯಡಿಯೂರಪ್ಪ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅವರು ದೇವರ ಹೆಸರಿನಲ್ಲಿ ನಾಲ್ಕನೇ ಬಾರಿ ರಾಜ್ಯದ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸಿದರು.

ಯಡಿಯೂರಪ್ಪ ಅವರೊಬ್ಬರೇ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಸಚಿವರಾಗಿ ಯಾರೂ ಪ್ರಮಾಣ ವಚನ ಸ್ವೀಕರಿಸಲಿಲ್ಲ. ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌, ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ, ಜಗದೀಶ್ ಶೆಟ್ಟರ್‌, ಅರವಿಂದ ಲಿಂಬಾವಳಿ, ಸದಾನಂದಗೌಡ, ಸಂಸದರು, ಶಾಸಕರು ಸೇರಿದಂತೆ ಬಿಜೆಪಿಯ ಹಲವು ಹಿರಿಯ ನಾಯಕರು, ನೂರಾರು ಕಾರ್ಯಕರ್ತರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದ್ದ ಶಿವಾಜಿನಗರ ಶಾಸಕ ರೋಷನ್‌ ಬೇಗ್‌, ಕಾಂಗ್ರೆಸ್‌ ಮಾಜಿ ಶಾಸಕ ಕೆ.ಎನ್‌. ರಾಜಣ್ಣ ಸಮಾರಂಭದಲ್ಲಿ ಹಾಜರಾಗಿದ್ದು, ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಈ ಹಿಂದೆ ಎಸ್‌. ನಿಜಲಿಂಗಪ್ಪ ಅವರು ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದರು. ಇದೀಗ ಬಿ.ಎಸ್ ಯಡಿಯೂರಪ್ಪ ಅವರು ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಒಂದು ವಾರದೊಳಗೆ ತಮಗಿರುವ ಬಹುಮತವನ್ನು ಸಾಬೀತುಪಡಿಸಬೇಕಿದೆ.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಒಂದು ವಾರದಲ್ಲಿ ತಮ್ಮ ಸರ್ಕಾರಕ್ಕಿರುವ ಬಹುಮತ ಸಾಬೀತುಪಡಿಸುವಂತೆ ಸೂಚಿಸಿದ್ದಾರೆ. ಆದರೆ ಒಂದು ವಾರ ಕಾಯದೆ ಸಾಧ್ಯವಾದಷ್ಟು ಬೇಗ ತಮ್ಮ ಸರ್ಕಾರಕ್ಕಿರುವ ಬಹುಮತ ಸಾಬೀತುಪಡಿಸಲು ಯಡಿಯೂರಪ್ಪ ನಿರ್ಧರಿಸಿದ್ದಾರೆ. ಜೊತೆಗೆ ಈ ಮಾಸಾಂತ್ಯದ ವೇಳೆಗೆ ಧನವಿನಿಯೋಗ ಮಸೂದೆಗಳ ಅಂಗೀಕಾರ ಪಡೆಯುವ ಜವಾಬ್ದಾರಿಯೂ ಯಡಿಯೂರಪ್ಪ ಅವರ ಹೆಗಲಿಗೆ ಬಿದ್ದಿದೆ.