ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯುವುದಿಲ್ಲ: ಅತೃಪ್ತರ ಶಾಸಕರ ಸ್ಪಷ್ಟನೆ

Share

ಮುಂಬೈ: ಎಷ್ಟೇ ಬಲವಂತ ಮಾಡಿದರೂ ಯಾವುದೇ ಕಾರಣಕ್ಕೂ ನಾವು ರಾಜೀನಾಮೆ ಹಿಂಪಡೆಯುವುದಿಲ್ಲ ಎಂದು ಅತೃಪ್ತ ಶಾಸಕರು ಸ್ಪಷ್ಟಪಡಿಸಿದ್ದಾರೆ.
ಮುಂಬೈನ ಹೋಟೆಲ್‍ನಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಎಷ್ಟೇ ಮನವೊಲಿಕೆ ಯತ್ನ ನಡೆಸಿದರೂ ನಾವು ಬಗ್ಗುವುದಿಲ್ಲ. ನಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ. ರಾಜೀನಾಮೆ ಹಿಂಪಡೆಯುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ.
ಶಾಸಕ ಎಚ್.ವಿಶ್ವನಾಥ್ ಮಾತನಾಡಿ, ಆಡಳಿತ ಪಕ್ಷದವರು ವಿಫಲ ಯತ್ನ ನಡೆಸುತ್ತಿದ್ದಾರೆ. ಯಾರೇ ಮುಖ್ಯಮಂತ್ರಿಯಾದರೂ ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ. ರಾಜೀನಾಮೆ ವಾಪಸ್ ಪಡೆಯುವುದಿಲ್ಲ ಎಂದು ತಮ್ಮ ನಿರ್ಧಾರವನ್ನು ಪ್ರಕಟಿಸಿದರು.
ರಾಜೀನಾಮೆ ನೀಡಿ ಮುಂಬೈನ ರಿನೆಸೈನ್ಸ್ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್‍ನ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜು, ಮುನಿರತ್ನ, ಬಿ.ಸಿ.ಪಾಟೀಲ್, ಶಿವರಾಮ್ ಹೆಬ್ಬಾರ್, ಪ್ರತಾಪ್‍ಗೌಡ ಪಾಟೀಲ್, ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಆನಂದ್‍ಸಿಂಗ್ ಹಾಗೂ ಜೆಡಿಎಸ್‍ನ ಗೋಪಾಲಯ್ಯ, ನಾರಾಯಣಗೌಡ ಸೇರಿದಂತೆ ಎಲ್ಲರೂ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.